ಕಲೆಯು ವ್ಯಕ್ತಿತ್ವ ವಿಕಸನಕ್ಕೆ ಅತ್ಯಂತ ಪೂರಕವಾಗಿರುವುದರಿಂದ ವಿದ್ಯಾರ್ಥಿಗಳು ಕಲೆಯೊಂದಿಗೆ ಗಾಢವಾದ ಸಂಬಂಧವನ್ನು ಹೊಂದಿರಬೇಕು. ತಂತ್ರಜ್ಞಾನದ ಒಳ್ಳೆಯ ಅಂಶಗಳನ್ನು ಮಾತ್ರ ಬಳಸಿಕೊಂಡು ಆ ಮೂಲಕ ಉದ್ಯೋಗದ ವಿವಿಧ ರಂಗಗಳ ಕುರಿತ ಜ್ಞಾನವನ್ನು ಪಡೆದುಕೊಳ್ಳಬೇಕು ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಯಾದ ಶ್ರೀ ರಘುನಂದನ ಬೇರ್ಕಡವು ಹೇಳಿದರು.
ವಿವೇಕಾನಂದ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದ ಎರಡನೇ ದಿವಸದಂದು ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಕಲೆ ಒಬ್ಬ ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುತ್ತದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಈ ಮೂಲಕ ಉನ್ನತ ಮಟ್ಟಕ್ಕೆ ಏರಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಎಸ್. ಆರ್. ರಂಗಮೂರ್ತಿ ಮಾತನಾಡಿ ಜೀವನದಲ್ಲಿ ಗುರಿ ಸ್ಪಷ್ಟವಿದ್ದು ಸರಿದಾರಿಯಲ್ಲಿ ಹೋದಾಗ ಮಾತ್ರ ಬದುಕಿಗೆ ಒಂದು ಅರ್ಥ ಬರುತ್ತದೆ. ನಾವು ಯಾವ ಕೆಲಸವನ್ನು ಮಾಡಿದರೂ ಅದಕ್ಕೆ ಪ್ರಯತ್ನ ಮುಖ್ಯ. ಆಗ ಮಾತ್ರ ಯಶಸ್ಸು ಲಭಿಸುತ್ತದೆ ಎಂದರು.
ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷೆಯಾದ ಶ್ರೀಮತಿ ಶ್ಯಾಮಲ ಮಿತ್ತೂರು ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಸಮಾರಂಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ರವೀಂದ್ರ ಪಿ, ಸಂಚಾಲಕರಾದ ಶ್ರೀ ಸಂತೋಷ್ ಬಿ., ಪ್ರಾಂಶುಪಾಲರಾದ ಶ್ರೀ ಜೀವನ್‌ದಾಸ್ ಉಪಸ್ಥಿತರಿದ್ದರು.
ಉಪನ್ಯಾಸಕಿ ಅಕ್ಷತಾ ಕಾರ್ಯಕ್ರಮವನ್ನು ನಿರೂಪಿಸಿದರು. ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಪರಮೇಶ್ವರ ಶರ್ಮ ಸ್ವಾಗತಿಸಿದರು. ಪ್ರಾಂಶುಪಾಲರಾದ ಶ್ರೀ ಜೀವನ್‌ದಾಸ್ ವಂದಿಸಿದರು. ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.